ಮಧುಗಿರಿ : ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಗ್ರಾಮದ ಮಂಜುನಾಥ ಎಂಬುವರ ಪುತ್ರರಾದ ರವೀಂದ್ರ (9) ಮತ್ತು ಸುಚಿತ್ರಾ (11) ಎಂದು ಗುರುತಿಸಲಾಗಿದೆ. ಬೇಸಿಗೆ ತಾಪಮಾನ ಹೆಚ್ಚಿರುವ ಹಿನ್ನೆಲೆಯಲ್ಲಿ ಬಾಯಾರಿಕೆಯಿಂದ ಹೊಂಡದ ಬಳಿ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಮತ್ತು ಕುಟುಂಬಸ್ಥರು ಧಾವಿಸಿ ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಕೆರೆ, ಕಟ್ಟೆ, ಹೊಂಡಗಳ ಬಳಿ ಹೋಗದಂತೆ ಎಚ್ಚರಿಕೆ ವಹಿಸಲು ಪೋಷಕರ ಸಭೆಗಳಲ್ಲಿ ಅನೇಕ ಬಾರಿ ತಿಳಿಸಿದ್ದೇವೆ. ರಜೆ ಇರುವ ಕಾರಣ ಮಕ್ಕಳ ಮೇಲೆ ಹೆಚ್ಚಿನ ಗಮನ ಇರಬೇಕು. ಇಂತಹ ದುರ್ಘಟನೆ ಸಂಭವಿಸಿರುವುದು ವಿಷಾಧನೀಯ.ಪೋಷಕರು ಮಕ್ಕಳ ಬಗ್ಗೆ ನಿಗಾವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ ತಿಳಿಸಿದ್ದಾರೆ.

